ವಿಜಯಪುರ ಜಿಲ್ಲಾ ಕೇಂದ್ರವೂ ಸೇರಿದಂತೆ ಜಿಲ್ಲೆಯಾದ್ಯಂತ ಇರುವ ಎಲ್ಲ ಅಧೀನ ನ್ಯಾಯಾಲಯಗಳಲ್ಲಿ ಡಿಸೆಂಬರ್ 13 ರಂದು ರಾಷ್ಟ್ರೀಯ ಲೋಕ್ ಅದಾಲತ್ ಆಯೋಜಿಸಲಾಗಿದ್ದು, ಈ ಅದಾಲತ್ನಲ್ಲಿ ಕಕ್ಷಿದಾರರು ಭಾಗವಹಿಸಿ ರಾಜಿ ಸಂಧಾನದ ಮೂಲಕ ಪ್ರಕರಣ ಇತ್ಯರ್ಥಕ್ಕೆ ಅವಕಾಶವಿರುವುದರಿಂದ ರಾಷ್ಟ್ರೀಯ ಲೋಕ್ ಅದಾಲತ್ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳುವಂತೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಹರೀಶ.ಎ ತಿಳಿಸಿದರು.
ಶನಿವಾರ ಜಿಲ್ಲಾ ನ್ಯಾಯಾಲಯ ಸಂಕೀರ್ಣದ ಎಡಿಆರ್ ಕಟ್ಟಡದಲ್ಲಿ ಆಯೋಜಿಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಎಲ್ಲ ವರ್ಗದ ಕಕ್ಷಿದಾರರಿಗೆ ಅನುಕೂಲವಾಗುವ ದೃಷ್ಟಿಯಿಂದ ಜಿಲ್ಲಾ ಕೇಂದ್ರ ಹಾಗೂ ಜಿಲ್ಲೆಯ ಎಲ್ಲ ತಾಲೂಕಾ ನ್ಯಾಯಾಲಯಗಳಲ್ಲಿ ಡಿಸೆಂಬರ್ 13 ರಂದು ರಾಷ್ಟ್ರೀಯ ಲೋಕ್ ಅದಾಲತ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು. ಲೋಕ್ ಅದಾಲತ್ ಕಾರ್ಯಕ್ರಮದಲ್ಲಿ ರಾಜಿ ಸಂಧಾನಕ್ಕೆ ಒಳಪಡಬಹುದಾದ ವ್ಯಾಜ್ಯ ಪೂರ್ವ ಪ್ರಕರಣಗಳು, ಚೆಕ್ ಅಮಾನ್ಯದ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು, ಉದ್ಯೋಗದಲ್ಲಿ ಪುನರ್ ಸ್ಥಾಪಿಸಲ್ಪಡುವ ಪ್ರಕರಣಗಳು, ವಿದ್ಯುತ್ ಹಾಗೂ ನೀರಿನ ಶುಲ್ಕ, ರಾಜಿಯಾಗಬಲ್ಲ ಅಪರಾಧಿಕ ಪ್ರಕರಣಗಳು,ವೈವಾಹಿಕ ಪ್ರಕರಣಗಳು ಮತ್ತು ಇತರೆ ಸಿವಿಲ್ ಪ್ರಕರಣಗಳು, ಕರ್ನಾಟಕ ರಿಯಲ್ ಎಸ್ಟೇಟ್ ಪ್ರಾಧಿಕಾರಕ್ಕೆ ಸಂಬಂಧಪಟ್ಟ ಪ್ರಕರಣಗಳು (ರೇರಾ), ಜಿಲ್ಲಾ ಗ್ರಾಹಕರ ವೇದಿಕೆಯಲ್ಲಿನ ಪ್ರಕರಣಗಳು, ಸಾಲ ವಸೂಲಾತಿ ನ್ಯಾಯಾಧೀಕರಣದ ಪ್ರಕರಣಗಳು (ಡಿಆರ್ಟಿ), ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ (ಕೆಇಆರ್ಸಿ), ಕಾಯಂ ಜನತಾ ನ್ಯಾಯಾಲಯದಲ್ಲಿನ ಪ್ರಕರಣಗಳು, ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳು, ಮೋಟಾರು ಅಪಘಾತ ಪರಿಹಾರ ನ್ಯಾಯಾಧೀಕರಣದ ಪ್ರಕರಣಗಳು, ಕಾರ್ಮಿಕ ವಿವಾದಗಳು, ಭೂಸ್ವಾಧೀನ ಪ್ರಕರಣಗಳು, ವೇತನ ಮತ್ತು ಭತ್ಯೆಗಳಿಗೆ ಸಂಬಂಧಿಸಿದ್ದ ಸೇವಾ ಪ್ರಕರಣಗಳು, ಪಿಂಚಣಿ ಪ್ರಕರಣಗಳು, ಕಂದಾಯ ಪ್ರಕರಣಗಳು ರಾಜಿಯಾಗಬಲ್ಲ ಸಿವಿಲ್ ಮತ್ತು ಇತರೆ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ರಾಷ್ಟ್ರೀಯ ಲೋಕ್ ಅದಾಲತ್ನಲ್ಲಿ ಇತ್ಯರ್ಥ ಪಡಿಸಿಕೊಳ್ಳಬಹುದಾಗಿದೆ. ಜಿಲ್ಲೆಯ ವಿವಿಧ ನ್ಯಾಯಾಲಯಗಳಲ್ಲಿ ದಿನಾಂಕ: 01-11-2025 ಕ್ಕೆ 45,902 ಸಿವಿಲ್ ಪ್ರಕರಣಗಳು ಹಾಗೂ 27,145 ಕ್ರಿಮಿನಲ್ ಪ್ರಕರಣಗಳು ಒಳಗೊಂಡಂತೆ ಒಟ್ಟು 73,047 ಪ್ರಕರಣಗಳು ವಿಚಾರಣೆಗೆ ಬಾಕಿ ಇದ್ದು, ಇವುಗಳಲ್ಲಿ ಈಗಾಗಲೇ 5,492 ಸಿವಿಲ್ ಪ್ರಕರಣಗಳು ಹಾಗೂ 6,830 ಕ್ರಿಮಿನಲ್ ಪ್ರಕರಣಗಳು ಸೇರಿದಂತೆ ಒಟ್ಟು 12,322 ಪ್ರಕರಣಗಳನ್ನು ಇತ್ಯರ್ಥಕ್ಕಾಗಿ ಗುರುತಿಸಲಾಗಿದೆ. ಸಂಬಂದಿಸಿದ ವಕೀಲರು ಹಾಗೂ ಕಕ್ಷಿದಾರರೊಂದಿಗೆ ಮಾತುಕತೆಯ ಮೂಲಕ ಇನ್ನೂ ಹೆಚ್ಚಿನ ಪ್ರಕರಣಗಳನ್ನು ಸಹ ರಾಜಿಗಾಗಿ ಗುರುತಿಸಲಾಗುತ್ತಿದೆ. ಹೆಚ್ಚಿನ ಪ್ರಕರಣಗಳು ರಾಷ್ಟ್ರೀಯ ಲೋಕ್ ಅದಾಲತ್ ನಲ್ಲಿ ಇತ್ಯರ್ಥಗೊಳ್ಳುವ ನಿರೀಕ್ಷೆ ಇದೆ ಎಂದು ತಿಳಿಸಿದರು.
ಇದೇ ವೇಳೆ ಹಿರಿಯ ಸಿವಿಲ್ ನ್ಯಾಯಾಧೀಶ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಅರವಿಂದ ಎಸ್ ಹಾಗರಗಿ,ಜಿಲ್ಲಾ ನ್ಯಾಯವಾದಿಗಳ ಸಂಘದ ಉಪಾಧ್ಯಕ್ಷರಾದ ಸುನೀಲ ಬಿರಾದಾರ, ಖಜಾಂಚಿಗಳಾದ ಎಂ.ಎ.ಕಾಖಂಡಕಿ ಉಪಸ್ಥಿತರಿದ್ದರು.



