ಕೃಷ್ಣಾ ಮೇಲ್ದಂಡೆ ಯೋಜನೆ ಹಂತ–3ರ ವ್ಯಾಪ್ತಿಯಲ್ಲಿ ಭೂಸ್ವಾಧೀನಗೊಳ್ಳಲಾದ ಜಮೀನುಗಳಿಗೆ ಒಪ್ಪಂದದ ದರದಂತೆ ಪರಿಹಾರ ವಿತರಣೆ ಪ್ರಕ್ರಿಯೆಗೆ ಬಾಗಲಕೋಟೆಯಲ್ಲಿ ಶನಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹಾಗೂ ಡಿಸಿಎಂ ಡಿ ಕೆ ಶಿವಕುಮಾರ್ ಮತ್ತು ಸಚಿವ ಎಂ ಬಿ ಪಾಟೀಲ್ ಚಾಲನೆ ನೀಡಿದರು.

ಇದೆ ವೇಳೆ ಕಾರ್ಯಕ್ರಮನ್ನುದ್ದೇಶಿಸಿ ಸಚಿವ ಎಂ ಬಿ ಪಾಟೀಲ್ ಮಾತನಾಡಿ. ಈ ಯೋಜನೆಯಡಿ ಆಲಮಟ್ಟಿ ಜಲಾಶಯದ ಎತ್ತರವನ್ನು 519.60 ಮೀಟರ್ ನಿಂದ 524.256 ಮೀಟರ್ ಗೆ ಹೆಚ್ಚಿಸಲಾಗುವುದು. ಇದರಿಂದ ಹೆಚ್ಚುವರಿ ಸುಮಾರು 130 ಟಿಎಂಸಿ ನೀರನ್ನು ನೀರಾವರಿ ಹಾಗೂ ಕುಡಿಯುವ ನೀರಿಗಾಗಿ ಬಳಸಿಕೊಳ್ಳಲಾಗುವುದು. ಈ ಮಹತ್ವಾಕಾಂಕ್ಷಿ ಯೋಜನೆಗೆ ಭೂಮಿ ನೀಡುವ ರೈತರಿಗೆ ನ್ಯಾಯಯುತ ಪರಿಹಾರ ಕೊಡಬೇಕು ಎಂಬ ನಮ್ಮೆಲ್ಲರ ಮನವಿಗೆ ಮುಖ್ಯಮಂತ್ರಿಗಳು ಸ್ಪಂದಿಸಿ, ನೀರಾವರಿ ಭೂಮಿ ಪ್ರತಿ ಎಕರೆಗೆ ₹40 ಲಕ್ಷ ಹಾಗೂ ಒಣಭೂಮಿ ಪ್ರತಿ ಎಕರೆಗೆ ₹30 ಲಕ್ಷ ಪರಿಹಾರ ನೀಡುವುದಾಗಿ ಘೋಷಿಸಿದ್ದರು. ತಾವು ನುಡಿದಂತೆ ನಡೆದು ಇಂದು ಸಾಂಕೇತಿಕವಾಗಿ ಪರಿಹಾರ ವಿತರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದೆ.ಮುಂದಿನ ದಿನಗಳಲ್ಲಿ ಈ ಯೋಜನೆಗಾಗಿ ಭೂಮಿ ನೀಡಿದ ಎಲ್ಲ ರೈತರಿಗೆ ಪರಿಹಾರವನ್ನು ವಿತರಿಸಲಾಗುವುದು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿಗಳು ಹಾಗೂ ಜಲಸಂಪನ್ಮೂಲ ಖಾತೆ ಸಚಿವರಾದ ಡಿ.ಕೆ. ಶಿವಕುಮಾರ್ ಸೇರಿದಂತೆ ಸಂಪುಟದ ಸಚಿವರು, ಶಾಸಕರು, ರೈತರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.



