ವಿಜಯಪುರ ಜಿಲ್ಲಾಡಳಿತದ ವತಿಯಿಂದ ಅ.7 ರಂದು ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ವಿವಿಧ ಇಲಾಖೆಗಳಿಗೆ ವಹಿಸಿದ ಜವಾಬ್ದಾರಿಯನ್ನು ಅತ್ಯಂತ ಅಚ್ಚುಕಟ್ಟಾಗಿ ನಿರ್ವಹಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ.ಕೆ ಸೂಚನೆ ನೀಡಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಗುರುವಾರ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆಯ ಕುರಿತು ಜಿಲ್ಲಾಧಿಕಾರಿಗಳಾದ ಡಾ.ಆನಂದ.ಕೆ ರವರ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತು. ಅ.7ರ ಬೆಳಿಗ್ಗೆ 9:30 ಗಂಟೆಗೆ ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ಕಂದಗಲ್ ಹನುಮಂತರಾಯ ರಂಗಮಂದಿರದವರೆಗೆ ವಿವಿಧ ಸತ್ತಿಗೆ ಕುಣಿತ, ಜಗ್ಗಲಿಗೆ ಕುಣಿತ, ಗೊಂಬೆ ಕುಣಿತ ಸೇರಿದಂತೆ ವಿವಿಧ ಕಲಾತಂಡಗಳೊಂದಿಗೆ ಮಹರ್ಷಿ ವಾಲ್ಮೀಕಿ ಭಾವಚಿತ್ರದ ಮೆರವಣಿಗೆ, ಬೆಳಿಗ್ಗೆ 10:30ಕ್ಕೆ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ವೇದಿಕೆ ಕಾರ್ಯಕ್ರಮ ಹಮ್ಮಿಕೊಳ್ಳಲು ನಿರ್ಧರಿಸಲಾಯಿತು. ಜಯಂತಿ ಕಾರ್ಯಕ್ರಮಕ್ಕೆ ಶಿಷ್ಟಾಚಾರದಂತೆ ಆಮಂತ್ರಣ ಪತ್ರಿಕೆ, ವೇದಿಕೆ ಅಲಂಕಾರ, ಜಯಂತಿ ಕಾರ್ಯಕ್ರಮಕ್ಕೆ ಅತಿಥಿಗಳಿಗೆ ಆಹ್ವಾನ, ಮಹರ್ಷಿ ವಾಲ್ಮೀಕಿ ರವರ ಜೀವನ ಚರಿತ್ರೆ, ವಿಚಾರಧಾರೆಗಳ ಕುರಿತು ಉಪನ್ಯಾಸ, ಎಸ್ಎಸ್ಎಲ್ಸಿ ಹಾಗೂ ಪಿಯುಸಿ ಯಲ್ಲಿ ಹೆಚ್ಚು ಅಂಕಗಳಿಸಿರುವ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನಿಸುವುದು ಸೇರಿದಂತೆ ವೇದಿಕೆ ಕಾರ್ಯಕ್ರಮಕ್ಕೆ ಅಗತ್ಯ ರೂಪುರೇಷೆ ಸಿದ್ಧಪಡಿಸಿಕೊಳ್ಳುವುದು ಹಾಗೂ ಕುಡಿಯುವ ನೀರಿನ ವ್ಯವಸ್ಥೆ, ವೃತ್ತಗಳಿಗೆ ದೀಪಾಲಂಕಾರ, ಆಸನ ವ್ಯವಸ್ಥೆ, ವೇದಿಕೆ ಸಿದ್ಧತೆ, ನೃತ್ಯ ರೂಪಕ ಏರ್ಪಡಿಸುವುದೂ ಸೇರಿದಂತೆ ಎಲ್ಲ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಯಿತು. ಈ ಸಂದರ್ಭದಲ್ಲಿ ವಿವಿಧ ಸಮಾಜದ ಮುಖಂಡರು ತಮ್ಮ ಅಗತ್ಯ ಸಲಹೆ ಸೂಚನೆ ನೀಡಿದರು. ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಮಹೇಶ ಪೋತದಾರ ಎಲ್ಲರನ್ನೂ ಸ್ವಾಗತಿಸಿ, ಕಾರ್ಯಕ್ರಮದ ರೂಪುರೇಷೆ ಕುರಿತು ಮಾಹಿತಿ ನೀಡಿದರು.

ಸಭೆಯಲ್ಲಿ ಡಿವೈಎಸ್ಪಿ ಬಸವರಾಜ ಎಲಿಗಾರ, ಜಿಲ್ಲಾ ಶಸ್ತ್ರಚಿಕಿತ್ಸಕರಾದ ಶಿವಾನಂದ ಮಾಸ್ತಿಹೊಳಿ,ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ಬದ್ರುದ್ದಿನ್ ಸೌದಾಗರ್, ಮೀನುಗಾರಿಕೆ ಇಲಾಖೆಯ ಉಪ ನಿರ್ದೇಶಕರಾದ ಎಂ.ಎಚ್.ಬಾಂಗಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಪುಂಡಲಿಕ ಮಾನವರ, ಕ್ರೀಡಾಧಿಕಾರಿ ರಾಜಶೇಖರ ದೈವಾಡಿ ಹಾಗೂ ವಿವಿಧ ಸಮಾಜದ ಮುಖಂಡರು ಮತ್ತು ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿರಿದ್ದರು.



