ಕಲಬುರಗಿ ನಗರದ ಹಳೇ ಜೇವರ್ಗಿ ರಸ್ತೆಯಲ್ಲಿರುವ ಪಿಎಸ್ಐ ಹಗರಣ ಪ್ರಕರಣದ ಪ್ರಮುಖ ಆರೋಪಿ ದಿವ್ಯಾ ಹಾಗರಗಿ ಮನೆ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿ, ದಿವ್ಯಾ ಹಾಗರಗಿ ಸೇರಿದಂತೆ ಏಳು ಮಂದಿಯನ್ನು ಬಂಧಿಸಿದ್ದಾರೆ. ಇನ್ನೂ ಮನೆಯಲ್ಲಿ ಗುಂಪು ಸೇರಿಕೊಂಡು ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಪಿಎಸ್ಐ ಹಗರಣ ಪ್ರಕರಣದ ಪ್ರಮುಖ ಆರೋಪಿ ದಿವ್ಯಾ ಹಾಗರಗಿ, ಸರ್ಕಾರಿ ನೌಕರರ ಸಂಘದ ಮಾಜಿ ಅಧ್ಯಕ್ಷ ರಾಜು ಲೆಂಗಟಿ, ಶಿವಶರಣಪ್ಪ ಮಶಾಳ, ರವೀಂದ್ರ ಮಾನಕರ, ಭಗವಾನ ಜಾಕೋರಿ, ಮಲ್ಲಿನಾಥ ಮಂಗಲಗಿ, ಸಂಗಮೇಶ ನಾಗನಹಳ್ಳಿ ಎಂಬುವವರನ್ನು ಬಂಧಿಸಲಾಗಿದೆ ಎಂದು ಸಿಸಿಬಿ ಪೊಲೀಸರು ತಿಳಿಸಿದ್ದಾರೆ. ಈ ಕುರಿತು ಕಲಬುರಗಿ ನಗರದ ಸ್ಟೇಷನ್ ಬಝಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




