ವಿಜಯಪುರ ಜಿಲ್ಲಾಡಳಿತದ ವತಿಯಿಂದ ನಗರದ ಡಾ.ಬಿ.ಆರ್.ಅಂಬೇಡ್ಕರ ಜಿಲ್ಲಾ ಕ್ರೀಡಾಂಗಣದಲ್ಲಿಆಯೋಜಿಸಿದ್ದ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದ ಅಂಗವಾಗಿ ರಾಷ್ಟ್ರ ಧ್ವಜಾರೋಹಣವನ್ನು ಜಿಲ್ಲಾ ಉಸ್ತುವಾರಿ ಸಚಿವ ಎಂ ಬಿ ಪಾಟೀಲ್ ನೆರವೇರಿಸಿದರು.ನಂತರ ವಿವಿಧ ಕವಾಯತು ಪಡೆಗಳಿಂದ ಗೌರವ ವಂದನೆ ಸ್ವೀಕರಿಸಿ ಮಾತನಾಡಿದ ಅವರು ಎಲ್ಲಾದರೂ ಇರು, ಎಂತಾದರು ಇರು, ಎಂದೆಂದಿಗೂ ನೀ ಕನ್ನಡವಾಗಿರು. ಕನ್ನಡವೇಸತ್ಯ, ಕನ್ನಡವೇನಿತ್ಯ, ಮಹಾಕವಿ ಕುವೆಂಪು ಅವರ ಈ ನುಡಿಗಳೊಂದಿಗೆ ತಮ್ಮ ಸಂದೇಶ ಆರಂಭಿಸಿ. ದೇಶದಾದ್ಯಂತ ಸಂಚಲನ ಸೃಷ್ಟಿಸಿರುವ ನಮ್ಮ ಸರ್ಕಾರದ ಗ್ಯಾರಂಟಿ ಯೋಜನೆಗಳು ಫಲಾನುಭವಿಗಳ ಬದುಕಿನಲ್ಲಿ ಬೆಳಕು ಮತ್ತು ಭರವಸೆ ತುಂಬುವಲ್ಲಿ ಸಫಲವಾಗಿವೆ ಎಂದು ಹೇಳಿದ ಅವರು ಅನ್ನಭಾಗ್ಯ ಯೋಜನೆಯಡಿಯಲ್ಲಿ ಅಂತ್ಯೋದಯ ಅನ್ನಯೋಜನೆಯ 40,065 ಚೀಟಿಗಳು, ಬಿ.ಪಿ.ಎಲ್ 4,59,558 ಚೀಟಿಗಳು ಹಾಗೂ ಎ.ಪಿ.ಎಲ್ 99,699 ಚೀಟಿಗಳು ಸೇರಿದಂತೆ ಜಿಲ್ಲೆಯಲ್ಲಿ ಒಟ್ಟಾರೆ 5,99,322 ಪಡಿತರ ಚೀಟಿಗಳು ಚಾಲ್ತಿಯಲ್ಲಿದ್ದು, ಈ ಪೈಕಿ 21,10,591 ಅರ್ಹ ಫಲಾನುಭವಿಗಳು ಈ ಯೋಜನೆಯ ಸದುಪಯೋಗ ಪಡೆದುಕೊಳ್ಳುತ್ತಿದ್ದಾರೆ ಎಂದು ಹೇಳಿದರು.

ಇದೆ ವೇಳೆ ಜಿಲ್ಲಾ ಸಶಸ್ತ್ರ ಮೀಸಲು ಪಡೆ, ಐಆರ್ಬಿ ಪೋಲಿಸ್ ಪಡೆ, ನಾಗರಿಕ ಪೋಲಿಸ್ ಪಡೆ, ಗೃಹರಕ್ಷಕ ದಳ, ಅರಣ್ಯ ಇಲಾಖೆ, ಅಗ್ನಿಶಾಮಕ ಇಲಾಖೆ, ಎನ್ಸಿಸಿ ಸೀನಿಯರ್ ಡಿವಿಜನ್, ಬಿಎಲ್ಡಿಇ ಬಾಲಕಿಯರ ಪ್ರೌಢ ಶಾಲೆ, ಸಂಗನ ಬಸವ ಅಂತರರಾಷ್ಟ್ರೀಯ ಶಾಲೆ ಬಾಲಕಿಯರು, ಹಾಗೂ ಪೋಲಿಸ್ ವಾದ್ಯವೃಂದ ಭಾಗವಹಿಸಿದ್ದವು. ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 25 ಸಾಧಕರನ್ನು ಸನ್ಮಾನಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಶಾಸಕ ವಿಠ್ಠಲ ಕಟಕಧೋಂಡ, ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದ ಅಧ್ಯಕ್ಷೆ ಕಾಂತಾ ನಾಯಕ, ಮೇಯರ್ ಮಡಿವಾಳಪ್ಪ ಸಿದ್ರಾಮಪ್ಪ ಕರಡಿ, ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕನಾನ್ ಮುಶ್ರೀಪ್, ಜಿಲ್ಲಾಧಿಕಾರಿ ಡಾ. ಆನಂದ ಕೆ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ,ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳು, ಕನ್ನಡಪರ ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.





