ಕನ್ನಡ ರಾಜ್ಯೋತ್ಸವದ ಆಚರಣೆ ಹಬ್ಬದ ವಾತಾವರಣದ ರೀತಿಯಲ್ಲಿ, ಅದ್ದೂರಿಯಾಗಿ ಮತ್ತು ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದ್ದು,ಆಯಾ ಇಲಾಖೆ ಅಧಿಕಾರಿಗಳು ಈ ಕಾರ್ಯಕ್ರಮವನ್ನು ಅತ್ಯಂತ ಅಚ್ಚುಕಟ್ಟಾಗಿ ನಿರ್ವಹಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಡಾ.ಆನಂದ ಕೆ ಅವರು ಸೂಚಿಸಿದರು. ಶನಿವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಆಚರಣೆ ಕುರಿತು ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ, ಮಾತನಾಡಿದರು.ಕನ್ನಡ ನಾಡು, ನುಡಿಯ ಬಗ್ಗೆ ಜಾಗೃತಿ ಮೂಡಿಸುವಲ್ಲಿ ರಾಜ್ಯೋತ್ಸವ ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ನಿರ್ವಹಿಸಿ,ಕನ್ನಡಮಯ ಹಬ್ಬದ ವಾತಾವರಣ ಇರುವಂತೆ ಅಗತ್ಯ ಯೋಜನೆ ರೂಪಿಸುವಂತೆಯೂ, ಕನ್ನಡದ ಶ್ರೀಮಂತ ಪರಂಪರೆ ಕಲೆ ಹಾಗೂ ಸಂಸ್ಕೃತಿ ಪ್ರತಿಬಿಂಬಿಸುವ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಸಮ್ಮಿಳಿತಗೊಳಿಸಬೇಕು. ಶ್ರೀಮಂತ ಸಂಸ್ಕೃತಿಯ ಪರಿಚಯ ಮಾಡಿಕೊಡುವ ಕಲಾ ಪ್ರಕಾರಗಳನ್ನು ಆಯೋಜಿಸಲು ಯೋಜನೆ ರೂಪಿಸಿಕೊಳ್ಳುವಂತೆಯೂ, ರಾಜ್ಯೋತ್ಸವ ಕಾರ್ಯಕ್ರಮದ ಮೂಲಕ ನಾಡಿನ ಕಲೆ,ಸಂಸ್ಕೃತಿ, ಇತಿಹಾಸ, ಸಾಹಿತ್ಯದ ಹಿರಿಮೆ-ಗರಿಮೆ ಕುರಿತು ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ತಿಳಿಸಿಕೊಡುವ ನಿಟ್ಟಿನಲ್ಲಿ ಕಾರ್ಯಕ್ರಮ ರೂಪಿಸಬೇಕು. ಈ ನಿಟ್ಟಿನಲ್ಲಿ ಸಾಂಸ್ಕೃತಿಕವಾಗಿ ಕಾರ್ಯಕ್ರಮಗಳನ್ನು ಆಯೋಜಿಸಬೇಕು ಎಂದು ಹೇಳಿದರು. ಕಾರ್ಯಕ್ರಮವು ವಿಜಯಪುರ ನಗರದ ಡಾ.ಬಿ.ಆರ್.ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ವ್ಯವಸ್ಥಿತವಾಗಿ ಹಮ್ಮಿಕೊಳ್ಳಬೇಕು. ಅಂದು ಬೆಳಿಗ್ಗೆ 9 ಗಂಟೆಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಿಂದ ಧ್ವಜಾರೋಹಣ ನೆರವೇರಲಿದೆ. ಕಾರ್ಯಕ್ರಮಕ್ಕೆ ಸಬಂಧಿಸಿದಂತೆ ಅಧಿಕಾರಿಗಳಿಗೆ ವಹಿಸಿದ್ದ ಎಲ್ಲ ಕೆಲಸ ಕಾರ್ಯಗಳನ್ನು ವ್ಯವಸ್ಥಿತವಾಗಿ ಕೈಗೊಳ್ಳಬೇಕು. ಅಂದು ಬೆಳಿಗ್ಗೆ 7.30ಕ್ಕೆ ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ಭುವನೇಶ್ವರ ದೇವಿಯ ಭಾವಚಿತ್ರದ ಭವ್ಯ ಮೆರವಣಿಗೆಯನ್ನು ವಿವಿಧ ಇಲಾಖೆಗಳು ನಿರ್ಮಿಸಿರುವ ಸ್ಥಬ್ಧಚಿತ್ರಗಳು, ಕಲಾ ತಂಡದೊಂದಿಗೆ ನಗರದ ವಿವಿಧ ವೃತ್ತಗಳ ಮೂಲಕ ಜಿಲ್ಲಾ ಕ್ರೀಡಾಂಗಣಕ್ಕೆ ಆಗಮಿಸುವುದು. ವೇದಿಕೆ ಸಿದ್ಧತೆ, ಶಿಷ್ಟಾಚಾರದಂತೆ ಅತಿಥಿ ಗಣ್ಯರನ್ನು ಆಹ್ವಾನಿಸುವುದು. ಆಹ್ವಾನ ಪತ್ರಿಕೆಯ ಮುದ್ರಣ ಹಾಗೂ ವಿತರಣೆ, ಆಸನದ ವ್ಯವಸ್ಥೆ, ಕುಡಿಯುವ ನೀರಿನ ವ್ಯವಸ್ಥೆ ಹಾಗೂ ಸ್ವಚ್ಛತೆ ಕಾರ್ಯ ಕೈಗೊಳ್ಳಲು ನಿರ್ದೇಶಿಸಿದರು.




