2026ನೇ ಸಾಲಿನ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಹೆಚ್ಚಿನ ಬಿಸಿಲಿನ ತಾಪಮಾನ ಹಿನ್ನೆಲೆಯಲ್ಲಿ ಏಪ್ರಿಲ್ 1 ರಿಂದ ಜಿಲ್ಲೆಯಲ್ಲಿ ಸರಕಾರಿ ಕಚೇರಿ ಸಮಯ ಬದಲಾವಣೆಯಾಗುತ್ತಿದ್ದಂತೆಯೇ, ಬುಧವಾರ ಬೆಳಗ್ಗೆಯೇ ಜಿಲ್ಲಾಧಿಕಾರಿಗಳಾದ ಡಾ. ಆನಂದ ಕೆ. ಅವರು ನಗರದ ಕೃಷಿ ಇಲಾಖೆ ಜಂಟಿ ನಿರ್ದೇಶಕರ ಕಚೇರಿ ಸೇರಿದಂತೆ ವಿವಿಧ ಕಚೇರಿಗಳಿಗೆ ಭೇಟಿ ನೀಡಿ ಪರಿಶೀಲಿಸಿ, ಅಧಿಕಾರಿ ಹಾಗೂ ಸಿಬ್ಬಂದಿಗಳ ಹಾಜರಾತಿ ಪರಿಶೀಲಿಸಿದರು. ಎಲ್ಲ ಅಧಿಕಾರಿ, ಸಿಬ್ಬಂದಿ ನಿಗದಿತ ಸಮಯಕ್ಕೆ ಕಚೇರಿಗೆ ಹಾಜರಾಗಬೇಕು. ದೈನಂದಿನ ಕಚೇರಿ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಬೇಕು. ಯಾವುದೇ ಸಿಬ್ಬಂದಿ ಯಾವುದೇ ಕಡತ, ವಹಿ ಬಾಕಿ ಉಳಿಸಿಕೊಳ್ಳದೇ ಕಾರ್ಯ ನಿರ್ವಹಿಸುವ ಮೂಲಕ ಕಡತಗಳನ್ನು ವಿಲೇವಾರಿಯಲ್ಲಿ ಪ್ರಗತಿ ಸಾಧಿಸಬೇಕು ಎಂದು ಸೂಚಿಸಿದರು.




