ಬೇಸಿಗೆಯಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳಲು ಜಿಲ್ಲೆಯಲ್ಲಿರುವ ಕೆರೆಗಳನ್ನು ಕಾಲುವೆ ಜಾಲಗಳ ಮೂಲಕ ಹರಿಸಲಾಗುತ್ತಿರುವ ನೀರನ್ನು ತುಂಬಿಸಿಟ್ಟುಕೊಂಡು, ನಿಗಾ ವಹಿಸುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ.ಕೆ ಅವರು ಸೂಚನೆ ನೀಡಿದರು.
ವಿಜಯಪುರ ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಗುರುವಾರ ನಡೆದ ಜಿಲ್ಲೆಯ ವಿವಿಧ ತಾಲೂಕಾ ತಹಶೀಲ್ದಾರರು, ತಾಲೂಕಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ವಿವಿಧ ಇಲಾಖೆ ಅಧಿಕಾರಿಗಳೊಂದಿಗೆ ಜಿಲ್ಲೆಯ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ನಿರ್ವಹಣಾ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯನ್ನು ನಡೆಸಿದ ಅವರು, ಬೇಸಿಗೆಯಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಅಭಾವ ಉಂಟಾಗದಂತೆ ನೋಡಿಕೊಳ್ಳಬೇಕು. ಲಭ್ಯವಿರುವ ನೀರನ್ನು ಸದ್ಬಳಕೆ ಮಾಡಿಕೊಂಡು ಯಾವುದೇ ಸಮಸ್ಯೆಯಾಗದಂತೆ ನೀರನ್ನು ಕಾಯ್ದಿಟ್ಟುಕೊಳ್ಳಲು ಸಂಬಂಧಿಸಿದ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು. ಈಗಿನಿಂದಲೇ ಮುಂಜಾಗ್ರತೆ ವಹಿಸಿ, ಕುಡಿಯುವ ನೀರು ಸಮರ್ಪಕವಾಗಿ ಒದಗಿಸಲು ಯಾವುದೇ ಅಡೆ-ತಡೆ ಉಂಟಾಗದಂತೆ ನೋಡಿಕೊಳ್ಳಬೇಕು. ಗ್ರಾಮ ಪಂಚಾಯತಿ, ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಬರುವ ಬೋರ್ವೆಲ್ಗಳ ಮಾಹಿತಿ ಸಂಗ್ರಹಿಸಿಟ್ಟುಕೊಳ್ಳಬೇಕು. ಪ್ರತಿ ಎರಡು ವಾರಕ್ಕೊಮ್ಮೆ ಕಾರ್ಯಪಡೆ ಸಭೆ ನಡೆಸುವಂತೆ ಸೂಚನೆ ನೀಡಿದರು. ಕುಡಿಯವ ನೀರಿಗೆ ಸಮಸ್ಯೆಯಾಗಬಹುದಾದ ವಸತಿ ಪ್ರದೇಶಗಳನ್ನು ಗುರುತಿಸಿಟ್ಟುಕೊಳ್ಳಬೇಕು.ಎಲ್ಲಿಯೂ ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಪೂರ್ವ ಸಿದ್ಧತೆ ಕೈಗೊಳ್ಳಬೇಕು. ಜಿಲ್ಲೆಯ ಗ್ರಾಮ, ಸ್ಥಳೀಯ ಸಂಸ್ಥೆಗಳ ಮಟ್ಟದಲ್ಲಿರುವ ಒವರ್ ಹೆಡ್ ಟ್ಯಾಂಕ್ ಸ್ವಚ್ಛಗೊಳಿಸಬೇಕು. ಸ್ವಚ್ಛಗೊಳಿಸಿದ ಕುರಿತು ಸಂಬಂಧಿಸಿದ ಗ್ರಾಮ ಪಂಚಾಯತನಲ್ಲಿ ಲಾಗ್ ಪುಸ್ತಕ ನಿರ್ವಹಿಸಬೇಕು. ತಾಲೂಕು ಮಟ್ಟದ ಅಧಿಕಾರಿಗಳು ನಿಗಾ ವಹಿಸಬೇಕು. ನಗರ ಪ್ರದೇಶ ಸೇರಿದಂತೆ ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರು ಪೂರೈಕೆಯಲ್ಲಿ ಎಚ್ಚರಿಕೆ ವಹಿಸಬೇಕು.ಕುಡಿಯುವ ನೀರನ್ನು ಕಡ್ಡಾಯವಾಗಿ ಪರೀಕ್ಷೆ ಮಾಡಿದ ನಂತರ ಪೂರೈಸಿ, ಕಲುಷಿತ ನೀರು ಪೂರೈಕೆಯಾಗದಂತೆ ಎಚ್ಚರ ವಹಿಸಿ, ಕುಡಿಯುವ ನೀರು ಪೂರೈಸುವ ಮುನ್ನ ನೀರಿನ ಜಲಮೂಲ, ನೀರು ಸಂಗ್ರಹಿಸುವ ಸ್ಥಳ, ನೀರಿನ ಮುಕ್ತಾಯದ ಹಂತ ಪರೀಕ್ಷಿಸಿದ ನಂತರವೇ ಸಂಬಂಧಿಸಿದ ಅಧಿಕಾರಿಗಳು ಖಚಿತಪಡಿಸಿಕೊಂಡು ನೀರು ಪೂರೈಕೆಗೆ ಕ್ರಮ ವಹಿಸಬೇಕೆಂದು ಸೂಚನೆ ನೀಡಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ, ಅಪರ ಜಿಲ್ಲಾಧಿಕಾರಿ ಡಾ.ಔದ್ರಾಮ, ಇಂಡಿ ಉಪ ವಿಭಾಗಾಧಿಕಾರಿ ಚಿದಾನಂದ ಗುರುಸ್ವಾಮಿ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.



